



ಮಡಿಕೇರಿ ಅ.16 NEWS DESK : ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ವಿರುದ್ಧ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಅದನ್ನು ಬೆಂಬಲಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ. ಮೊಣ್ಣಪ್ಪ ಅವರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ, ಪಕ್ಷದ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ವಕೀಲ ರಾಕೇಶ್ ಕಿಶೋರ್, ಆತನ ವರ್ತನೆಯನ್ನು ಬೆಂಬಲಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ಹಾಗೂ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಕೀಲ ಅನಿಲ್ ಮಿಶ್ರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭ ಪಕ್ಷದ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.









