
ಮಡಿಕೇರಿ NEWS DESK ಅ.27 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ನಮನ ಸಮರ್ಪಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು 1837 ಅಕ್ಟೋಬರ್ 31 ರಂದು ಬ್ರಿಟಿಷರು ಮಡಿಕೇರಿ ಕೋಟೆ ಆವರಣದಲ್ಲಿ ಸಾರ್ವಜನಿಕವಾಗಿ ಗಲ್ಲಿಗೇರಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಅ.31ರಂದು ವೀರ ಸ್ವಾತಂತ್ರ ಹೋರಾಟಗಾರನಿಗೆ ಗೌರವ ನಮನ ಸಮರ್ಪಣೆ ಮತ್ತು ಪುಷ್ಪನಮನ ಸಲ್ಲಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.









