
ಮಡಿಕೇರಿ ನ.3 NEWS DESK : ಕನ್ನಡ ನಾಡು ನುಡಿ, ನೆಲ-ಜಲ, ಸಾಹಿತ್ಯ, ಸಂಸ್ಕøತಿಯ ಸಂರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ(ಹೆಚ್.ಶಿವರಾಮೇಗೌಡ)ಯ ಕೊಡಗು ಜಿಲ್ಲಾ ಘಟಕ ಕಟಿಬದ್ಧವಾಗಿ ಕಾರ್ಯನಿರ್ವಹಿಸಲಿದೆ ಎಂದು ನೂತನ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಅಕ್ಟೋಬರ್‍ನಲ್ಲಿ ಕರವೇ ಜಿಲ್ಲಾಧ್ಯಕ್ಷ ಸ್ಥಾನವನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ಶೀಘ್ರದಲ್ಲೆ ಕರವೇ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಸಂಘಟನೆಗಳು ಅಸ್ತಿತ್ವದಲ್ಲಿವೆ. ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಿತಿಗಳ ರಚನೆಯಾಗಬೇಕಾಗಿದೆ ಎಂದರು. ಜಿಲ್ಲಾ ವ್ಯಾಪ್ತಿಯಲ್ಲಿ ಮುಚ್ಚಲ್ಪಟ್ಟಿರುವ ಕನ್ನಡ ಶಾಲೆಗಳನ್ನು ಬಡ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರ್ಕಾರ ಮತ್ತೆ ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ಕರವೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು. ಕರವೇ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿ ಗೌಡ ಅವರು ಮಾತನಾಡಿ, ಕನ್ನಡ ನಾಡಿನ ಎಲ್ಲೆಡೆಯೂ ಕನ್ನಡ ನಾಮ ಫಲಕಗಳು ಇರಬೇಕು. ಈ ಬಗ್ಗೆ ಸಂಘಟನೆಯ ಮೂಲಕ ಕನ್ನಡ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದರು, ಸೂಕ್ತ ಸ್ಪಂದನ ದೊರಕುತ್ತಿಲ್ಲ. ಇದೇ ರೀತಿ ನಿರ್ಲಕ್ಷ್ಯ ತೋರಿದರೆ ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದರು. ಕರವೇ ಸದಸ್ಯ ಗೋವಿಂದರಾಜ್ ದಾಸ್ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಕೊಡಗಿನಲ್ಲಿ ವಲಸಿಗ ಕಾರ್ಮಿಕರ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಇದರಿಂದ ಸ್ಥಳೀಯ ಕಾರ್ಮಿಕರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕರವೇ ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಹಾಗೂ ಮಡಿಕೇರಿ ಉಪಾಧ್ಯಕ್ಷ ಪಿ.ಸಿ.ನಾಗೇಶ್ ಉಪಸ್ಥಿತರಿದ್ದರು.









