
ಮಡಿಕೇರಿ ಜ.27 NEWS DESK : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ನೀಡಲಾಗುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ, ಬಿಳಿಗೇರಿ ಗ್ರಾಮದ ಅರ್ವತೋಕ್ಲುವಿನ ಬಾಳಾಡಿ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ.
ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿರಂತರವಾಗಿ ವಿವಿಧ ಯುವ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ದಿಲೀಪ್ ಕುಮಾರ್ ಅವರು ಸಾಮಾಜಿಕ ಕಳಕಳಿಯನ್ನು ಹೊಂದಿದ್ದರು. ಇವರ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಜ.31ರಂದು ವಿಜಯಪುರದ ಮುದ್ದೆಬಿಹಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿಲೀಪ್ ಕುಮಾರ್ ಅವರು ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾಗಿ, ಪೇರತ ಯುವಕ ಸಂಘದ ಮೂಲಕ ಸದಸ್ಯರಾಗಿ, ಮೈ ಭಾರತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ, ಕೃಷಿ ಕಾರ್ಯಾಗಾರ, ಪಶುಸಂಗೋಪನೆ ಕಾರ್ಯಾಗಾರ, ಗ್ರಾಮೀಣ ಕ್ರೀಡಾಕೂಟ, ಯುವಜನ ಮೇಳ, ಯೋಗ ದಿನಾಚರಣೆ, ಬೈಸಿಕಲ್ ಡೇ, ಯುವಜನೋತ್ಸವ, ಯುವ ಸಪ್ತಾಹ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಡಿಕೇರಿ ತಾಲ್ಲೂಕಿನಾದ್ಯಂತ ಆಯೋಜಿಸಿ ಯುವ ಸಂಘಟನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೆ, ಜಿಲ್ಲಾ ಯುವ ಭವನವನ್ನು ಜಿಲ್ಲಾ ಯುವ ಒಕ್ಕೂಟಕ್ಕೆ ಮರಳಿ ಪಡೆಯುವಲ್ಲಿ ಶ್ರಮಿಸಿದ್ದಾರೆ ಎಂದು ಪಿ.ಪಿ.ಸುಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.









