ಮಡಿಕೇರಿ, NEWS DESK ಫೆ.16 : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಪರಿಣಾಮ ಆತಂಕ ಸೃಷ್ಟಿಯಾದ ಘಟನೆ ಇಂದು ನಡೆಯಿತು. ಇ-ಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ನ್ಯಾಯಾಲಯದಿಂದ ಹೊರಬಂದರು.

ಕೊಡಗು ಜಿಲ್ಲಾ ಪೊಲೀಸರು, ಬಾಂಬ್ ನಿಗ್ರಹದಳ ಮತ್ತು ಶ್ವಾನದಳ ನ್ಯಾಯಾಲಯದ ಕಟ್ಟಡಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.

ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಬಾಂಬ್ ಬೆದರಿಕೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯದಲ್ಲಿ ತಪಾಸಣೆ ನಡೆಸಲಾಗಿದೆ. ಆದರೆ ಯಾವುದೇ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದರು.








