
ಮಡಿಕೇರಿ NEWS DESK ಏ.15 : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಎ.ಕಿಶೋರ್ ಕುಮಾರ್ ಅವರು ಚುನಾವಣೆ ನಡೆಸದ ಕಾಂಗ್ರೆಸ್ ಸರಕಾರ ಆಡಳಿತದಲ್ಲಿ ನಿಷ್ಕ್ರಿಯವಾಗಿದೆ. ಪಂಚಾಯಿತಿಗಳ ಅಧಿಕಾರ ಅಧಿಕಾರಿಗಳ ಕಪಿಮುಷ್ಟಿಯಲ್ಲಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದ್ದಾರೆ. ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮತ್ತು ಶೀಘ್ರ ಚುನಾವಣೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಕೊಡಗು ಜಿಲ್ಲೆಯ ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ಏ.24 ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯಲ್ಲಿ ಹಾಗೂ ಏ.27 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಛೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.








