
ಮಡಿಕೇರಿ ಏ.20 NEWS DESK : ವಿದ್ಯುತ್ ದರ ಏರಿಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಉಚಿತ ಭಾಗ್ಯದ ಹೆಸರಿನಲ್ಲಿ ಒಂದು ಕೈಯಲ್ಲಿ ಸೌಲಭ್ಯವನ್ನು ನೀಡಿ ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ವಾಧಿಕಾರಿ ಧೋರಣೆಯನ್ನು ಸರಕಾರ ಅನುಸರಿಸುತ್ತಿದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಪರಿಷ್ಕರಣೆ ಮೇ ತಿಂಗಳಿನಿಂದಲೇ ಜಾರಿಗೆ ಬರಲಿದೆ. ಎಸ್ಕಾಂಗಳು ಸುಮಾರು 2,068 ಕೋಟಿ ರೂಪಾಯಿಗಳ ಆದಾಯದ ಕೊರತೆಯನ್ನು ಎದುರಿಸುತ್ತಿದ್ದು, ಇದನ್ನು ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 2024-25ರ ಆರ್ಥಿಕ ವರ್ಷದಲ್ಲಿ ಎಸ್ಕಾಂಗಳು ನಿರೀಕ್ಷಿತ ಆದಾಯದ ಕೊರತೆಯನ್ನು ಎದುರಿಸುತ್ತಿರುವುದರಿಂದ ಈ ಹೆಚ್ಚುವರಿ ಹೊರೆಯನ್ನು ಗ್ರಾಹಕರಿಂದ ಸಂಗ್ರಹಿಸಲು ಸರಕಾರ ಮುಂದಾಗಿದೆ. ಇದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಪ್ರಯತ್ನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಗೃಹಜ್ಯೋತಿ ಯೋಜನೆಯ ಮೂಲಕ ರಾಜ್ಯದ ಪ್ರತಿಮನೆಗೆ ಉಚಿತ ವಿದ್ಯುತ್ ನೀಡುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಸರಕಾರ, ವಿದ್ಯುತ್ ದರವನ್ನು ಏರಿಕೆ ಮಾಡಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ಜನರ ಮೇಲೇಯೇ ದರ ಮತ್ತು ತೆರಿಗೆ ಏರಿಕೆಯ ಬರೆ ಎಳೆಯುತ್ತಿದೆ. ಸಾಲದ ಹೊರೆಯನ್ನು ಹೇರುತ್ತಿದೆ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡದೆ ಜನರನ್ನು ವಂಚಿಸುತ್ತಿದೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.







