
ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಅವರು, ಈ ಕುರಿತು ಶೀಘ್ರವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (𝗦𝗣) ಜೊತೆ ದೂರವಾಣಿ ಮಾತನಾಡಿದ ಸಚಿವರು, ಪ್ರಕರಣದ ವಿವರಗಳನ್ನು ಪಡೆದುಕೊಂಡರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದೆ ತನಿಖೆ ಮುಂದುವರೆದಿದೆ. “ಕೊಡಗು ಜಿಲ್ಲೆಯು ಪ್ರವಾಸೋದ್ಯಮಕ್ಕೆ (𝗧𝗼𝘂𝗿𝗶𝘀𝗺) ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಂತಹ ಅಹಿತಕರ ಘಟನೆಗಳಿಂದ ಜಿಲ್ಲೆಯ ಘನತೆ ಹಾಗೂ ಪ್ರವಾಸೋದ್ಯಮದ ಮೇಲೆ ಗಂಭೀರವಾದ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.








