
ಮಡಿಕೇರಿ NEWS DESK ಜೂ.2 : ರಾಜ್ಯದಲ್ಲಿ ನೂತನ ಮಂತ್ರಿಮoಡಲ ರಚನೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅನುಭವಿ ರಾಜಕಾರಣಿಗಳಾಗಿ ಆಡಳಿತದಲ್ಲಿ ದಕ್ಷತೆಯನ್ನು ಮೆರೆದು ಜನಸ್ನೇಹಿ ನಾಯಕರಾಗಿ ಗುರುತಿಸಿಕೊಂಡಿರುವ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಲಭಿಸಿದರೆ ಕೊಡಗಿನ ಸಮಗ್ರ ಅಭಿವೃದ್ಧಿಯಾಗಲಿದೆ. ಎಂದು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕದ್ವಯರು ಎಲ್ಲಾ ಜಾತಿ, ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಸಾಕಷ್ಟು ಅನುದಾನ ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದ್ದಾರೆ. ಅಭಿವೃದ್ಧಿಪರ ಚಿಂತನೆಯ ಯುವ ಶಾಸಕರಿಗೆ ಸಚಿವ ಸ್ಥಾನದ ಅಧಿಕಾರ ದೊರೆತರೆ ರಾಜ್ಯ ಮಟ್ಟದಲ್ಲಿ ಉತ್ತಮ ಸೇವೆ ಮಾಡಲು ಅವಕಾಶ ಲಭಿಸಿದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರಿಗೆ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಮೇಲೆ ಅಪಾರ ಅಭಿಮಾನವಿದೆ. ಆದ್ದರಿಂದ ಈ ಇಬ್ಬರು ಶಾಸಕರಿಗೂ ಸಚಿವ ಸ್ಥಾನ ಲಭಿಸಲಿದೆ ಎನ್ನುವ ವಿಶ್ವಾಸವಿದೆ ಎಂದು ಆರ್.ಪಿ.ಚಂದ್ರಶೇಖರ್ ಹೇಳಿದ್ದಾರೆ.








