
ಮಡಿಕೇರಿ NEWS DESK ಜೂ.3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ದಕ್ಷ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಹಾಗೂ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೆ.ಯು.ಹ್ಯಾರೀಶ್ ಚೆಟ್ಟಿಮಾನಿ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಾಗೂ ರಾಜ್ಯ ಮಟ್ಟದ ಸೇವೆಗಾಗಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಪ್ರಬಲ ಖಾತೆಯನ್ನು ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಟ್ಟಾಳು, ಪಕ್ಷಕ್ಕಾಗಿ ಹಗಲಿರುಳು ದುಡಿದ ನಿಷ್ಠಾವಂತ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ನಮಗೆಲ್ಲ ಹೆಮ್ಮೆ ಎನಿಸಿದೆ. ಈ ಸಂದರ್ಭ ನೂತನ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವರುಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಅಲ್ಲದೆ ವಿರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕ, ಅಭಿವೃದ್ಧಿಪರ ಚಿಂತನೆಯ ಜನಸೇವಕ ಎ.ಎಸ್.ಪೊನ್ನಣ್ಣ ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ, ಆಡಳಿತಾತ್ಮಕ ಅನುಭವವನ್ನು ಕೂಡ ಹೊಂದಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಅತಿಹೆಚ್ಚು ಜನಪ್ರಿಯತೆ ಗಳಿಸಿರುವ ಶಾಸಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳಲ್ಲಿ ಇತರರಿಗೆ ಮಾದರಿಯಾಗಿರುವ ಇವರು ರಾಷ್ಟç ಹಾಗೂ ರಾಜ್ಯ ಮಟ್ಟದ ನಾಯಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಪೊನ್ನಣ್ಣ ಅವರ ಆಡಳಿತದ ದಕ್ಷತೆ ಮತ್ತು ಪಕ್ಷ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದು ಕೆ.ಯು.ಹ್ಯಾರೀಶ್ ಕೋರಿದ್ದಾರೆ.








