
ಮಡಿಕೇರಿ NEWS DESK ಜೂ.5 : ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್ ಆಚಾರ್ಯ ಅವರು ಜಿಲ್ಲೆಯ ಇಬ್ಬರು ಉತ್ಸಾಹಿ ಶಾಸಕರು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಸಮಸ್ಯೆಗಳಿಗೆ ಖುದ್ದು ಸ್ಪಂದಿಸುತ್ತಿರುವ ಶಾಸಕದ್ವಯರ ಸೇವೆ ರಾಜ್ಯಕ್ಕೂ ವ್ಯಾಪಿಸಿದರೆ ಯುವಶಕ್ತಿಗೆ ಪ್ರೇರಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿನಾಡು ಕೊಡಗಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜಕೀಯವಾಗಿ ಬಲ ತುಂಬಬೇಕು. ಇದರಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಗದೀಶ್ ಆಚಾರ್ಯ ತಿಳಿಸಿದ್ದಾರೆ.








