
ವಿರಾಜಪೇಟೆ ಜೂ.22 NEWS DESK : ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಾಗೂ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳಾದ ಲೋಕೇಶ್ ಹಾಗೂ ನಂದೀಶ್ ಶಾಲಾ ಮಕ್ಕಳಿಗೆ ಪರಿಸರದ ಸಂರಕ್ಷಣೆಯ ಮಹತ್ವವನ್ನು, ಗಿಡ ನೆಡುವುದರ ಮಹತ್ವವನ್ನು ಹಾಗೂ ಅರಣ್ಯ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಉದಾಹರಣೆಗಳ ಮೂಲಕ ವಿವರಿಸಿದರು. ನಂತರ ಶೌರ್ಯ ವಿಪತ್ತು ತಂಡದ ಸಂಯೋಜಕರಾದ ಜಯಪ್ರಕಾಶ್ ಶಾಲಾ ಮಕ್ಕಳಿಗೆ ಯೋಗಾಭ್ಯಾಸವನ್ನು ಮಾಡಿಸಿದರು. ಸೂರ್ಯ ನಮಸ್ಕಾರ, ಪ್ರಾಣಾಯಾಮ, ವಜ್ರಾಸನ, ಏಕ ಪಾದಾಸನ ಮುಂತಾದ ಆಸನಗಳನ್ನು ಮಾಡಿಸಿದರು. ಶಾಲಾ ಮಕ್ಕಳು ಉತ್ಸಾಹದಿಂದ ಯೋಗಾಭ್ಯಾಸವನ್ನು ಮಾಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ, ಎಸ್ ಡಿ ಎಂ ಸಿ ಅಧ್ಯಕ್ಷೆ ರೋಹಿಣಿ, ಹಿರಿಯ ಶಿಕ್ಷಕಿ ಹೇಮಲತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶಿವಕುಮಾರ್, ಕೃಷಿ ಅಧಿಕಾರಿ ವಸಂತ್, ಎಸ್ ಡಿ ಎಂ ಸಿ ಸದಸ್ಯರುಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









