
ಮಡಿಕೇರಿ ಜು.8 NEWS DESK : ಪ್ರಸಕ್ತ (2026-27) ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತ, ರೈತ ಮಹಿಳೆಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2026-27ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಭಾಗವಹಿಸಲು ಇಚ್ಚಿಸುವ ಜಿಲ್ಲೆಯ ರೈತರುಗಳು ಅರ್ಜಿ ಸಲ್ಲಿಸಬಹುದಾಗಿದೆ. ಭಾಗವಹಿಸುವ ರೈತರ ಸಂಶೋಧನೆ, ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಯಸುವ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್‍ಐಡಿ (ಫ್ರೂಟ್ಸ್ ಐಡಿ) ಸಂಖ್ಯೆಯನ್ನು ಬಳಸಿಕೊಂಡು ಕೆ-ಕಿಸಾನ್ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.








