
ಸೋಮವಾರಪೇಟೆ ಜು.14 NEWS DESK : ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಆಚರಿಸಿ, ಆಸ್ಪತ್ರೆಯ ವೈದ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಜಮೀರ್, ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುವುದು ಸಂತೋಷ ತಂದಿದ್ದು, ಸಾರ್ವಜನಿಕರು ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಕೆಲವು ವೈದ್ಯರ ಕೊರತೆ ಇದ್ದರೂ, ಲಭ್ಯವಿರುವ ವೈದ್ಯರು ಎಲ್ಲ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡಲು ಶ್ರಮಿಸುತ್ತಿದ್ದಾರೆ ಎಂದರು. ವೈದ್ಯರ ದಿನಾಚರಣೆಯ ಅಂಗವಾಗಿ ತಮ್ಮನ್ನು ಸನ್ಮಾನಿಸಿರುವುದು ವೈದ್ಯರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಕೊಡಗು ಜಿಲ್ಲೆಗೆ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿರುವುದು ಸವಾಲಿನ ವಿಷಯವಾಗಿದೆ. ಈ ಕುರಿತು ಜಿಲ್ಲೆಯ ಶಾಸಕರು ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಹೇಳಿದರು. ಈಗಾಗಲೇ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಬಹುತೇಕ ನೀಗಿಸಲಾಗಿದ್ದು, ಪ್ರಸ್ತುತ ಒಂಬತ್ತು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ವೈದ್ಯಕೀಯ ಉಪಕರಣಗಳ ಕೊರತೆ ಇದ್ದು, ಅವುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮಾತನಾಡಿ, ಆಸ್ಪತ್ರೆಯ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದರೂ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಸಾಗಿಸಲು ಅಗತ್ಯ ಸಂಖ್ಯೆಯ ಆಂಬುಲೆನ್ಸ್‍ಗಳ ಕೊರತೆ ಇದೆ ಎಂದು ಹೇಳಿದರು. ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳಿಗೂ ರೋಗಿಗಳು ಜಿಲ್ಲಾ ಆಸ್ಪತ್ರೆಗೆ ತೆರಳಬೇಕಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕು ಆಸ್ಪತ್ರೆಗೆ ಅರಿವಳಿಕೆ (ಅನಸ್ತೇಶಿಯಾ) ತಜ್ಞರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು. ಈ ಭಾಗದಲ್ಲಿ ಕೂಲಿ ಕಾರ್ಮಿಕರು ಹಾಗೂ ರೈತರ ಸಂಖ್ಯೆ ಹೆಚ್ಚಿರುವುದರಿಂದ ಮೂಳೆ ಮುರಿತದಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಆದ್ದರಿಂದ ತಾಲೂಕು ಆಸ್ಪತ್ರೆಗೆ ಮೂಳೆ ರೋಗ ತಜ್ಞರನ್ನೂ ನೇಮಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೈದ್ಯರಾದ ಡಾ. ಕೆ. ಕಿರಣ್, ಡಾ. ಆರ್. ಪ್ರತಿಭಾ, ಡಾ. ಎನ್. ಅಶ್ವಿನಿ.,ಡಾ. ಎಚ್.ಎಂ.ಶೇಖರಾಜು., ಡಾ.ಜಿ. ಮಂಜಳ., ಡಾ. ಯಶಸ್ ಗಾಂಧಿ ಹಾಗೂ ಡಾ. ಲೋಕೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕರವೇ ಪದಾಧಿಕಾರಿಗಳಾದ ಮಂಜುನಾಥ್, ವಸಂತ್, ರವೀಶ್ ಸೇರಿದಂತೆ ಹಲವರು ಇದ್ದರು.











