

ಮಡಿಕೇರಿ NEWS DESK ಜು.22 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಬಂಧನವನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಸೋರಿಕೆ ಹಗರಣಕ್ಕೆ ಸಂಬ0ಧಿಸಿದ0ತೆ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಸಂದರ್ಭ ರಸ್ತೆ ತಡೆ ಮಾಡಲು ಮುಂದಾದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಹುಲ್ ಗಾಂಧಿ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಕೇ0ದ್ರದ ಎನ್‌ಡಿಎ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ. ನ್ಯಾಯಕ್ಕಾಗಿ ಹೋರಾಡುವ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುವ ಪ್ರಯತ್ನವನ್ನು ಕೇಂದ್ರ ಸರಕಾರ ಮಾಡುತ್ತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಅನೇಕರು ಆತ್ಮಹತ್ಯೆಗೂ ಶರಣಾಗಿದ್ದಾರೆ, ಆದರೆ ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಮತ್ತು ಶಿಕ್ಷಣ ಸಚಿವರ ರಾಜೀನಾಮೆಯನ್ನು ಪಡೆಯದೆ ನಿರ್ಲಕ್ಷ್ಯ ವಹಿಸಿದೆ. ಸರಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ, ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಲ್ಲಿಯವರೆಗೆ ಕಾಂಗ್ರೆಸ್ ಹೋರಾಟ ತೀವ್ರಗೊಳ್ಳಲಿದೆ ಎಂದು ತಿಳಿಸಿದ ಅವರು, ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಕಾಂಗೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್, ನಗರಾಧ್ಯಕ್ಷೆ ಶಶಿಕಲಾ, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಕುಶಾಲನಗರ ಅಧ್ಯಕ್ಷ ವಿ.ಪಿ.ಶಶಿಧರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಕಾಂಗ್ರೆಸ್ ಪ್ರಮುಖರಾದ ಆರ್.ಪಿ.ಚಂದ್ರಶೇಖರ್, ತೆನ್ನಿರ ಮೈನಾ, ಮಿನಾಜ್ ಪ್ರವೀಣ್, ಕೆ.ಯು.ಅಬ್ದುಲ್ ರಜಾಕ್, ಜಾನ್ಸನ್ ಪಿಂಟೋ, ಫ್ಯಾನ್ಸಿ ಪಾರ್ವತಿ, ಬೇಕಲ್ ರಮಾನಾಥ್,ಕೋಚನ ಚೇತನ್, ಸದಾ ಮುದ್ದಪ್ಪ, ಗೌರೀಶ್ ರೈ, ಉದಯ ಕುಮಾರ್, ಕಲೀಲ್ ಬಾಷಾ, ಎಂ.ಯು.ಹನೀಫ್, ಲೀಲಾ ಶೇಷಮ್ಮ, ಹೆಚ್.ಎ.ಹಂಸ, ಕೆ.ಜಿ.ಪೀಟರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾ0ಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.









