
ಮಡಿಕೇರಿ ಜು.24 NEWS DESK : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಹಾದಿ ತಪ್ಪಿಸುವ ಮೂಲಕ ದೇಶದಲ್ಲಿ ಅಶಾಂತಿ ಮೂಡಿಸುವ ಯತ್ನದಲ್ಲಿ ಕಾಂಗ್ರೆಸ್ ತೊಡಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಸ್ಕ್ವಾಡರ್ನ್ ಲೀಡರ್ ದೇವಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾಕ್ರೋಚ್ ಜನತಾ ಪಾರ್ಟಿಯ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ಮುಂದಾದರಾದರು. ಈ ಸಂದರ್ಭ ಪೊಲೀಸರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಕಾಂಗ್ರೆಸ್ ಪ್ರಮುಖರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದನ್ನು ಬಿಜೆಪಿ ಪ್ರಮುಖರು ತೀವ್ರವಾಗಿ ಖಂಡಿಸಿದರು.
ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ನೀಟ್ ಪ್ರಕರಣದ ಕುರಿತು ವಿದ್ಯಾರ್ಥಿಗಳು ನಡೆಸಿದ ಹೋರಾಟದ ನಡುವೆ ಪ್ರವೇಶಿಸಿ ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿಗಳು ನಡೆಸಿರುವ ಹೋರಾಟ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷ ಪ್ರಧಾನಿ ಮನೆಯ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿರುವುದಕ್ಕೆ ಕಾರಣವಾದರು ಏನು ಎಂದು ಪ್ರಶ್ನಿಸಿದರು. ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಕಾಕ್ರೋಚ್ ಜನತಾ ಪಾರ್ಟಿಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲವನ್ನು ನೀಡುವ ಮೂಲಕ ರಾಷ್ಟ್ರದಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ಶಾಂತೆಯಂಡ ರವಿ ಕುಶಾಲಪ್ಪ, ರಾಬಿನ್ ದೇವಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ.ಲೋಕೇಶ್, ಮಹೇಶ್ ಜೈನಿ, ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ಪಕ್ಷದ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ಬಲ್ಲಾರಂಡ ಮಣಿ ಉತ್ತಪ್ಪ, ಯಮುನಾ ಚಂಗಪ್ಪ, ಉಮಾ ಪ್ರಭು, ಪಟ್ರಪಂಡ ರಘು ನಾಣಯ್ಯ, ಪಿ.ಡಿ.ಪೊನ್ನಪ್ಪ, ಆರ್.ಕೆ.ಚಂದ್ರ, ಅರುಣ್ ಶೆಟ್ಟಿ, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕೇಟೋಳಿರ ಹರೀಶ್ ಪೂವಯ್ಯ, ತಳೂರು ಕಿಶೋರ್ ಕುಮಾರ್, ಬೊಳ್ಳಜಿರ ಅಯ್ಯಪ್ಪ ಸೇರಿದಂತೆ ಕಾಯಕರ್ತರು ಪಾಲ್ಗೊಂಡಿದ್ದರು. ಪ್ರತಿಭಟನಾ ಸ್ಥಳದಿಂದ ಕೆಲವೇ ದೂರದಲ್ಲಿರುವ ಮಹದೇವಪೇಟೆಯಲ್ಲಿನ ಕಾಂಗ್ರೆಸ್ ಕಚೇರಿಗೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು.









