
ವಿರಾಜಪೇಟೆ ಜು.24 NEWS DESK : ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಮೂಹ ದೆಹಲಿಯಲ್ಲಿ ಕೈಗೊಂಡ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರದ ಧೋರಣೆ ಮತ್ತು ಕ್ರಮಗಳನ್ನು ವಿರೋಧಿಸಿ ನಗರದಲ್ಲಿ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಆಯೋಜಿತ ಪ್ರತಿಭಟನೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡು ಕೇಂದ್ರದ ಕ್ರಮಗಳನ್ನು ತೀವ್ರವಾಗಿ ವಿರೋಧಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದ್ದು, ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಅಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ನೀಟ್ ಪರೀಕ್ಷೆಯನ್ನು ಎದುರಿಸುವುದು ಸಾಮಾನ್ಯ. ಆದರೆ, ಗೌಪ್ಯವಾಗಿ ನಡೆಸಬೇಕಾದ ಈ ಪರೀಕ್ಷಾ ಕ್ರಮಗಳನ್ನು ಮೀರಿ ಪರೀಕ್ಷಾ ಇಲಾಖೆಯ ಸಿಬ್ಬಂದಿಗಳು ಉದ್ದೇಪೂರ್ವಕವಾಗಿ ನಡೆದುಕೊಂಡ ಪರಿಣಾಮ, ಪ್ರಶ್ನೆ ಪತ್ರಿಕೆ ಬಹಿರಂಗಗೊಂಡು ಹಲ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಯಿತೆಂದು ಬೆಸರ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಮೌನವಾಗಿದೆ. ಈ ಬಗ್ಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ನಾವು ಪ್ರತಿಭಟಿಸುತಿದ್ದೇವೆ. ಪ್ರತಿಭಟಿಸುವ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡಿರುವುದನ್ನು ಬಲವಾಗಿ ಖಂಡಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಯ ಅದ್ಯಕ್ಷರಾದ ಟಿ.ಪಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಮಹಿಳಾ ಅದ್ಯಕ್ಷೆ ನಯನ ಹಾಗೂ ಜಿಲ್ಲಾ, ತಾಲ್ಲೂಕು ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಲ್ಪ ಸಂಖ್ಯಾತರ ಘಟಕ, ನಗರ ಘಟಕದ ಪದಾಧಿಕಾರಿಗಳು, ವಿದ್ಯಾರ್ಥಿ ಘಟಕ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.









