
ಸಿದ್ದಾಪುರ NEWS DESK ಜು.27 : ವೀರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಮೀಸಲು ಅರಣ್ಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅಕ್ರಮವಾಗಿ ಸಮಾಧಿ ನಿರ್ಮಿಸಿರುವ ಪ್ರಕರಣವನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಹಿಂದೂ ಸುರಕ್ಷಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಗೋರಿಯನ್ನು ತೆರವುಗೊಳಿಸಬೇಕು. ಕೋಮು ಗಲಭೆಗೆ ಪ್ರಚೋದಿಸುತ್ತಿರುವ ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಿದ್ದಾಪುರ–ಮೈಸೂರು ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ವಾಹನಗಳ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಗೋರಿಯನ್ನು ಅಗೆದಾಗ ಯಾವುದೇ ಅವಶೇಷ ಕಂಡು ಬರಲಿಲ್ಲ. ಹಿಂದೂ ಪರ ಸಂಘಟನೆಯ ಚೆಕ್ಕೇರ ಮನು ಅವರು ಮಾತನಾಡಿ, ಹಿಂದೂ ದೇವಾಲಯದ ಆವರಣದಲ್ಲಿ ಖಬರಸ್ಥಾನ ಮಾದರಿಯಲ್ಲಿ ಗೋರಿ ನಿರ್ಮಿಸಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂದೂ ದೇವಾಲಯವನ್ನು ಅಪವಿತ್ರ ಮಾಡಲಾಗಿದೆ. ಇದು ಕೋಮು ಗಲಭೆ ಸೃಷ್ಟಿಸುವ ಸಂಚಾಗಿದೆ. ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಮುಖಂಡ ಶಾಂತೆಯAಡ ರವಿ ಕುಶಾಲಪ್ಪ ಅವರು ಮಾತನಾಡಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದರು. ಜಿಲ್ಲೆಯ ವಿವಿಧ ಭಾಗಗಳ ಹಿಂದೂ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.










