
ಮಡಿಕೇರಿ NEWS DESK ಜು.30 : ಕಳೆದ ಕೆಲವು ದಿನಗಳಿಂದ ಅಯ್ಯಂಗೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಡಾನೆಗಳು ಗದ್ದೆಗಳಿಗೆ ಲಗ್ಗೆ ಇಟ್ಟು ಭತ್ತದ ಕೃಷಿಯನ್ನು ನಾಶ ಮಾಡುತ್ತಿವೆ. ನಾಟಿ ಕಾರ್ಯ ಮುಗಿದಿರುವ ಗದ್ದೆಗಳಿಗೆ ತೀವ್ರ ಹಾನಿಯಾಗಿದ್ದು, ನಷ್ಟಕ್ಕೊಳಗಾಗಿರುವ ರೈತರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಯ್ಯಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರಣ್ಯ ಇಲಾಖೆ ಶಾಶ್ವತ ಪರಿಹಾರ ಸೂಚಿಸಬೇಕೆಂದು ಒತ್ತಾಯಿಸಿದ್ದಾರೆ. *ಅರಣ್ಯ ಸಿಬ್ಬಂದಿಗಳ ಭೇಟಿ* ಕಾಡಾನೆಗಳು ಉಪಟಳ ನೀಡುತ್ತಿರುವ ಅಯ್ಯಂಗೇರಿ ಪ್ರದೇಶಕ್ಕೆ ಇಂದು ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿದರು. ಗ್ರಾಮಸ್ಥರ ಸಹಕಾರದೊಂದಿಗೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಆರಂಭಿಸಿದರು.









