
ಮಡಿಕೇರಿ ಜು.31 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಜಿಲ್ಲೆಯಲ್ಲಿ ಆಗಸ್ಟ್, 02 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಲಿಖಿತ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‍ಎಸ್‍ಎಸ್)–2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್‍ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ನಿಷೇಧಾಜ್ಞೆಯು ಆಗಸ್ಟ್ 2 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.









