
ಮಡಿಕೇರಿ ಆ.5 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಬರ ಮತ್ತು ಅತಿವೃಷ್ಟಿ ವೀಕ್ಷಣೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮತ್ತು ಜಿಲ್ಲಾಧಿಕಾರಿ ಜೆ.ಸೋಮಶೇಖರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ಹೊರಹರಿವು, ಜಲಾನಯನ ಪ್ರದೇಶದಲ್ಲಿನ ಮಳೆಯ ಪ್ರಮಾಣ ಕುರಿತು ನೀರಾವರಿ ಇಲಾಖೆಯ ಎಂಜಿನಿಯರ್ ಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಪಶ್ಚಿಮ ಘಟ್ಟ ಹಾಗೂ ಕೊಡಗು ಜಿಲ್ಲೆಯಲ್ಲಿ ತಡವಾಗಿ ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಇತರರು ಇದ್ದರು.










