
ಮಡಿಕೇರಿ NEWS DESK ಆ.18 : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಇಂದು ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾ.ಪಂ ನೌಕರರು ಕಳೆದ 7-8 ವರ್ಷಗಳಿಂದ ವೇತನ ಪರಿಷ್ಕರಣೆಯಾಗದೆ ಇರುವುದರಿಂದ ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡುತ್ತಿರುವ ವೇತನ ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಾಕಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪಿ.ಆರ್.ಭರತ್ ಮಾತನಾಡಿ ಸರಕಾರ ದುಡಿಯುವ ವರ್ಗಕ್ಕೆ ಸಹಾಯ ಮಾಡಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಮೇ 22, 2026 ರಂದು ಹೊರಡಿಸಿರುವ ಆದೇಶದನ್ವಯ ವೇತನ ಬಿಡುಗಡೆ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾಗಾರರಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕಿಯರು ಹಾಗೂ ಕಸಗುಡಿಸುವ ಮಹಿಳೆಯರು ಸುಮಾರು 1-2 ವರ್ಷದಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ನೌಕರರನ್ನು ಸರಕಾರ ಸಂಜೀವಿನಿ ಒಕ್ಕೂಟದಿಂದ ಬೇರ್ಪಡಿಸಿ ಪಂಚಾಯಿತಿ ಮೂಲಕ ವೇತನ ನೀಡಬೇಕೆಂದು ಎಂದು ಒತ್ತಾಯಿಸಿದರು. *ಬೇಡಿಕೆಗಳು* ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನವನ್ನು ಪರಿಗಣಿಸಿ 5 ವರ್ಷ ಸೇವೆ ಸಲ್ಲಿಸಿರುವ ನೌಕರರಿಗೆ ರೂ. 750, 10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ರೂ.1500, 15 ವರ್ಷ ಮೇಲ್ಪಟ್ಟು 3,000 ಇನ್ಕಿçಮೆಂಟ್ ನೀಡಬೇಕು.
ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ, ರೂ.6 ಲಕ್ಷ ಇಡುಗಂಟು ಘೋಷಿಸಬೇಕು. ಗ್ರಾಮ ಪಂಚಾಯತ್‌ನಲ್ಲಿ ಠರಾವು ಮೂಲಕ ನೇಮಕಾತಿಯಾಗಿರುವ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತಿ ಅನುಮೋದನೆ ಆಗದೇ ಇದ್ದರು ಅಂತಹ ಸಿಬ್ಬಂದಿಗಳಿಗೂ ಇಡಗಂಟು ನೀಡಲು ಆದೇಶ ಹೊರಡಿಸಬೇಕು. ತರಬೇತಿ ಪಡೆದಿರುವ ಎಲ್ಲಾ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಡಂಬಡಿಕೆ ಪತ್ರ ಮತ್ತು ಪ್ರತಿವರ್ಷದ ನವೀಕರಣ ಪದ್ಧತಿ ರದ್ದು ಪಡಿಸಬೇಕು. 15 ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು. ಗ್ರಾಮ ಪಂಚಾಯತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಿದ್ದು ಸ್ವಾಗತ. ಆದರೆ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಂಡು ಮುಂದುವರೆಸಬೇಕು. ಅಲ್ಲದೇ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರು ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕೆ, 2017ರ ಒಳಗೆ ಇರುವ ಹೆಚ್ಚುವರಿ ಕರ ವಸೂಲಿಗಾರರಿಗೆ ಅನುಮೋದನೆ ನೀಡಬೇಕು.
ಮೊದಲನೇ ಡಾಟಾ ಎಂಟ್ರಿ ಆಪರೇರ್ಟಗಳಿಗೆ ಸ್ಪರ್ಶಿ ಹುದ್ದೆ ತರವಾದ ನಂತರ ಅನುಮೋದನೆ ನೀಡಬೇಕೆಂಬ ಷರತ್ತನ್ನು ಕೈಬಿಟ್ಟು ಅನುಮೋದನೆ ನೀಡಲು ಅವಕಾಶ ಒದಗಿಸಬೇಕು. ಗ್ರೇಡ್-1 ಕಾರ್ಯದರ್ಶಿಗಳಿಂದ ಪಿ.ಡಿ.ಓ ಹುದ್ದೆಗೆ ರಾಜ್ಯಮಟ್ಟದಲ್ಲಿ ಕೊಡುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಪ್ರತಿಯೊಂದು ಗ್ರಾಮ ಪಂಚಾಯತಿಗಳಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಗ್ರೇಡ್-1 ಪಂಚಾಯತಿಗಳನ್ನು ಜನಸಂಖ್ಯೆಗೆ ಮೇಲ್ದರ್ಜೆಗೆ ಏರಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಶೇಕಡಾ 60 ರಷ್ಟು ಸ್ಥಾನವನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ಪಂಚಾಯತ್ ರಾಜ್ ಸಚಿವರು ಹಾಗೂ ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರತಿಭಟನಾಕಾರರು ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ವಿಜಯ್, ದಿನೇಶ್, ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು.









