
ಮಡಿಕೇರಿ ಆ.19 NEWS DESK : ವಿರಾಜಪೇಟೆ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ‘ನಶೆ ಮುಕ್ತರಾಗುವ ಪ್ರತಿಜ್ಞೆ’ ಅಭಿಯಾನವನ್ನು ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಕೋಮಲ ಅವರು, ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಕರೆ ನೀಡಿದರು. ಮಾದಕ ವಸ್ತುಗಳ ವ್ಯಸನ ಹಾಗೂ ಇತರ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಬೇಕು ಎಂದರು. ನಶೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯಕರ ಹಾಗೂ ಉತ್ತಮ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಕುಟುಂಬ, ಸಮಾಜ ಮತ್ತು ದೇಶದ ಹಿತದೃಷ್ಟಿಯಿಂದ ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಜೊತೆಗೆ ಪರಮಾತ್ಮನಲ್ಲಿ ನಂಬಿಕೆ ಇಟ್ಟು ಮನಸ್ಸನ್ನು ಕೇಂದ್ರೀಕರಿಸಲು ಧ್ಯಾನವನ್ನು ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸದಸ್ಯರಾದ ಚಂಗಪ್ಪ, ಅಕ್ಕಮ್ಮ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಅನುಪಮ ತಿಮ್ಮಯ್ಯ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕಿಯ ಬಾನು ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಎಂ.ಪಿ.ದಮಯಂತಿ ವಂದಿಸಿದರು.









