
ಮಡಿಕೇರಿ ಆ.20 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ‘ಸದ್ಭಾವನಾ ದಿನಾಚರಣೆ’ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪ್ರತಿಜ್ಞಾ ವಿಧಿಯನ್ನು ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಬೋಧಿಸಿದರು, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಬೋಧಿಸಿದರು. ಅಲ್ಲದೇ ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಆಗಲಿ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಮಂಗಲ ವಿ.ಎಚ್., ವಿಶೇಷ ಚೇತನರ ಅಧಿಕಾರಿ ವಿಮಲ, ಶಿರಸ್ತೇದಾರ್ ಮಹೇಶ್, ಷಣ್ಮುಖ, ಇತರರು ಇದ್ದರು.









