ವಿರಾಜಪೇಟೆ, NEWS DESK ಆ.30: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪರೀಕ್ಷೆಗಳಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿ ವಿಶಿಷ್ಟ ಸಾಧನೆ ಮಾಡಿದ ವಿರಾಜಪೇಟೆಯ ಪ್ರತಿಷ್ಠಿತ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕೊಡಗು ಜಿಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ವತಿಯಿಂದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಮಾತನಾಡಿದ ರೆ. ಫಾ. ಮದಲೈ ಮುತ್ತು, ಕಾಲೇಜು ಪ್ರತಿವರ್ಷವೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಜೊತೆಗೆ ಆಡಳಿತ ಮಂಡಳಿಯ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್, ಡಿಡಿಪಿಯು ಗಣಪತಿ, ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಅವರು ಕಾಲೇಜಿನ ಈ ಸಾಧನೆಗೆ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.








