ಬೆಂಗಳೂರು, NEWS DESK ಸೆ.02: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಮತ್ತು ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಶಾಸಕ ಪೊನ್ನಣ್ಣ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಆರ್‌ಡಿಪಿಆರ್ ಇಲಾಖೆಯ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೋನಿಗಳ ರಸ್ತೆ ಅಭಿವೃದ್ಧಿ ಮತ್ತು ನಿವೇಶನ ಹಂಚಿಕೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ಕಾಲೋನಿಗಳ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಕ್ಷೇತ್ರದ ಜನರಿಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಗುಣಮಟ್ಟ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು ಉಪಸ್ಥಿತರಿದ್ದರು.







