ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಆ.27ರಂದು ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವತಿಯಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಒಟ್ಟು ಒಂಬತ್ತು ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಉಪಾಧ್ಯಕ್ಷ ಡಿ.ಎಸ್. ವಿಶ್ವನಾಥ್, ಕಾರ್ಯದರ್ಶಿ ದಿವಾಕರ್ ಎಚ್.ಎಂ., ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವೀಶ್, ಬೆಸೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮುರಳೀಧರ್, ಮುಖ್ಯ ಶಿಕ್ಷಕ ಅಭಿಲಾಷ್ ಎಚ್.ಎಂ., ದೈಹಿಕ ಶಿಕ್ಷಕ ಪುನೀತ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿ ಸಂಘದ ಕ್ರೀಡಾ ಸಚಿವ ಮಿಥುನ್ ಕ್ರೀಡಾ ಜ್ಯೋತಿಯನ್ನು ಓಟದ ಮೂಲಕ ತಂದು ಗಣ್ಯರಿಗೆ ಹಸ್ತಾಂತರಿಸಿದರು. ಕ್ರೀಡಾ ಜ್ಯೋತಿ ಸ್ವೀಕರಿಸಿದ ದಿವಾಕರ್ ಎಚ್.ಎಂ. ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವ ಬೆಳೆಸುವುದರ ಜೊತೆಗೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ರೂಪಿಸುತ್ತದೆ ಎಂದರು.
ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ಕೊಕ್ಕೋ, ವಾಲಿಬಾಲ್, ಥ್ರೋಬಾಲ್, ಕಬಡ್ಡಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಸಮಗ್ರ ಚಾಂಪಿಯನ್‌ಶಿಪ್ ಗೆದ್ದುಕೊಂಡರು. ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬೆಸೂರು ಕ್ರೀಡಾಕೂಟದಲ್ಲೂ ಗಮನಾರ್ಹ ಸಾಧನೆ
ಆ.31ರಂದು ಬೆಸೂರು ಶಾಲೆಯಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿಯೂ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಬಾಲಕರ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಥ್ರೋಬಾಲ್ ಹಾಗೂ ಕೊಕ್ಕೋದಲ್ಲಿ ದ್ವಿತೀಯ ಸ್ಥಾನ, ಬಾಲಕರ ಫುಟ್ಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್‌ನಲ್ಲಿಯೂ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಗಳಿಸಿದ್ದಾರೆ.
14 ವರ್ಷದೊಳಗಿನ ಪ್ರಾಥಮಿಕ ವಿಭಾಗದಲ್ಲಿ ಬಾಲಕರ ಹಾಗೂ ಬಾಲಕಿಯರ ಕೊಕ್ಕೋದಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಸೇರಿದಂತೆ ಅಥ್ಲೆಟಿಕ್ಸ್‌ನಲ್ಲಿ ವಿವಿಧ ಸ್ಥಾನಗಳನ್ನು ಪಡೆದು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೆರೆದಿದ್ದಾರೆ.
ಎರಡೂ ಹಂತಗಳ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹ, ಶಿಸ್ತು ಹಾಗೂ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಿ ಸಾಧನೆ ಮಾಡಿದ್ದು, ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.









