ಸುಂಟಿಕೊಪ್ಪ, NEWS DESK ಸೆ.11: ಮಿಠಾಯಿ ಖರೀದಿಸಿ ರಸ್ತೆ ದಾಟಲು ಯತ್ನಿಸುತ್ತಿದ್ದ ಆರು ವರ್ಷದ ಬಾಲಕಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.
ಶುಕ್ರವಾರ ಬೆಳಿಗ್ಗೆ 11.45ರ ಸುಮಾರಿಗೆ ಚೆಸ್ಕಾಂ ಕಚೇರಿ ಸಮೀಪದ ಹೊಸ ಬಡಾವಣೆಯಲ್ಲಿ ಘಟನೆ ನಡೆದಿದೆ. ಮೂಲತಃ ಅಸ್ಸಾಂ ರಾಜ್ಯದವರಾದ ಸಿರಾಜು ರೆಹಮಾನ್ ಮತ್ತು ಜಹನಾರ್ ದಂಪತಿ ಕೂಲಿ ಕೆಲಸಕ್ಕಾಗಿ ಸುಂಟಿಕೊಪ್ಪಕ್ಕೆ ಬಂದು ಹೊಸ ಬಡಾವಣೆಯಲ್ಲಿ ನೆಲೆಸಿದ್ದರು. ಇವರ ಪುತ್ರಿ ಮುಸುಮತ್ ಪಿಂಕಿಕತ್ತುಲ್ (6) ಹೆದ್ದಾರಿ ಬದಿಯ ಅಂಗಡಿಯೊಂದರಲ್ಲಿ ಮಿಠಾಯಿ ಖರೀದಿಸಲು ತೆರಳಿದ್ದಳು.
ಮಿಠಾಯಿ ಖರೀದಿಸಿದ ಬಳಿಕ ರಸ್ತೆ ದಾಟಲು ಒಂದೆರಡು ಹೆಜ್ಜೆ ಹಾಕುತ್ತಿದ್ದ ಸಂದರ್ಭದಲ್ಲಿ ಮೈಸೂರು-ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ (ಕೆಎ 09 ಎಫ್ 5419) ಬಾಲಕಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಕೂಡಲೇ ಸುಂಟಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಬಾಲಕಿ ಮೃತಪಟ್ಟಿದ್ದಾಳೆ.
ಈ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.








