
ಮಡಿಕೇರಿ NEWS DESK ಸೆ.11 : ಗೌರಿ ಗಣೇಶ, ದಸರಾ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ಧ್ವನಿವರ್ಧಕಗಳಲ್ಲಿ ‘Pressure Mid’ ಅಳವಡಿಸುವುದು ಹಾಗೂ ‘Pressure Mid’ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜೆ., ಭಾ.ಆ.ಸೇ. ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಹಬ್ಬಗಳ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ, ನಿಯಮ ಮೀರಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಾಗೂ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹಿಂದಿನ ವರ್ಷಗಳಲ್ಲಿ ಧ್ವನಿಯ ತೀವ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ‘Pressure Mid’ ಅಳವಡಿಸಿ ಬಳಸಿರುವುದು ಗಮನಕ್ಕೆ ಬಂದಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳ ವರದಿಯ ಆಧಾರದ ಮೇಲೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. 2026ರ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 31ರವರೆಗೆ ಕೊಡಗು ಜಿಲ್ಲೆಯಾದ್ಯಂತ ಧ್ವನಿವರ್ಧಕಗಳಲ್ಲಿ ‘Pressure Mid’ ಅಳವಡಿಸುವುದು ಹಾಗೂ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. The Noise Pollution (Regulation and Control) Rules, 2000ರ ನಿಯಮ 8 ಹಾಗೂ ಪೊಲೀಸ್ ಕಾಯ್ದೆ–1963ರ ಕಲಂ 35ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ. ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.








