ಮಡಿಕೇರಿ, NEWS DESK ಸೆ.12: ಕೋಲಾರದ ಬಂಗಾರಪೇಟೆಯಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ಸೇರಿದಂತೆ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಮೆನ್ಸ್ ಇಂಡಿಯನ್ ಮೂವ್‌ಮೆಂಟ್ ಸಂಘಟನೆಯ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ವಿಮೆನ್ಸ್ ಇಂಡಿಯನ್ ಮೂವ್‌ಮೆಂಟ್‌ನ ಜಿಲ್ಲಾಧ್ಯಕ್ಷೆ ರಿಶಾನ ತಹಸೀರ್ ಅವರ ನೇತೃತ್ವದಲ್ಲಿ ಶನಿವಾರ ನಗರದ ಇಂದಿರಾಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಂಘಟನೆಯ ಜಿಲ್ಲಾಧ್ಯಕ್ಷೆ ರಿಶಾನ ತಹಸೀರ್ ಮಾತನಾಡಿ, ಕೋಲಾರದ ಬಂಗಾರಪೇಟೆಯಲ್ಲಿ ವಾರದ ಹಿಂದೆ ಸಂಜೆ ವೇಳೆ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ. ಈ ಕುರಿತು ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಒಬ್ಬ ಆರೋಪಿಯನ್ನು ಮಾತ್ರ ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಕೂಡ ಬಂಧಿಸಿ, ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲು ಪೊಲೀಸ್ ಇಲಾಖೆ ಹಾಗೂ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಕೊಡಗು ಜಿಲ್ಲೆಯಲ್ಲಿಯೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ನಡೆದಿವೆ. ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣ, ಗೋಣಿಕೊಪ್ಪಲಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಸಿದ್ದಾಪುರದಲ್ಲಿ ಪುಟ್ಟ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣಗಳು ಆಘಾತಕಾರಿ ಬೆಳವಣಿಗೆಗಳಾಗಿವೆ. ಇಂತಹ ಪ್ರಕರಣಗಳ ತಪ್ಪಿತಸ್ಥರನ್ನು ಯಾವುದೇ ವಿಳಂಬವಿಲ್ಲದೆ ಬಂಧಿಸಿ, ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ರಿಶಾನ ತಹಸೀರ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಮೆನ್ಸ್ ಇಂಡಿಯನ್ ಮೂವ್‌ಮೆಂಟ್‌ನ ಉಪಾಧ್ಯಕ್ಷೆ ಝಾಕಿಯಾ, ಪ್ರಧಾನ ಕಾರ್ಯದರ್ಶಿ ತಾಹಿರಾ ಅಲಿ, ಕಾರ್ಯದರ್ಶಿ ಮೇರಿ ವೆಗಾಸ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.








