

ಪೊನ್ನಂಪೇಟೆ, NEWS DESK ಸೆ.14 : ಕೊಡವ ಜನಾಂಗದವರು ತಮ್ಮ ನೈಜ ಆಚರಣೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ (ರಿ) ಆಶ್ರಯದಲ್ಲಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿರುವ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪುಸ್ತಕವನ್ನು ಓದದೆ ಯಾವುದೇ ವಿಚಾರವನ್ನು ಸಮರ್ಪಕವಾಗಿ ವಿಶ್ಲೇಷಿಸಲು ಸಾಧ್ಯವಿಲ್ಲ. ಒಂದು ಅಧ್ಯಯನಾತ್ಮಕ ಪುಸ್ತಕವನ್ನು ಹೊರತರುವುದು ಅತ್ಯಂತ ಕಷ್ಟದ ಕೆಲಸವಾಗಿದೆ. ಕೊಡವರು ಗುರು ಕಾರೋಣವನ್ನು ಪ್ರಾರ್ಥಿಸಿ ಕೇಳಿಕೊಂಡಾಗ ಅವರೇ ಎಲ್ಲವನ್ನೂ ತಿಳಿಸುವಂತಹ ಪೂರ್ವಕಾಲದಿಂದಲೂ ಬಂದಿರುವ ಆಧ್ಯಾತ್ಮಿಕ ಸಂಪರ್ಕವನ್ನು ಹೊಂದಿದ್ದಾರೆ ಎಂದು ಹೇಳಿದರು. ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿರುವ ಪುಸ್ತಕವನ್ನು ಎಲ್ಲರೂ ಓದಬೇಕು. ಪುಸ್ತಕವು ಉತ್ತಮವಾಗಿ ಮೂಡಿಬಂದಿದ್ದು, ಲೇಖಕರಿಗೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು. ತಮ್ಮ ತಾತ 1963ರಲ್ಲಿ ಕೋವಿ ಹಕ್ಕಿನ ಕುರಿತು ಕಾನೂನು ಹೋರಾಟ ನಡೆಸಿದ್ದರು ಎಂದು ಸ್ಮರಿಸಿದ ಪೊನ್ನಣ್ಣ, ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಪುಸ್ತಕವನ್ನು ಪ್ರಕಟಿಸಿ ಹೊರತಂದಿರುವುದು ಉತ್ತಮ ಕಾರ್ಯವಾಗಿದೆ ಎಂದರು. ಇದೇ ಸಂದರ್ಭದಲ್ಲಿ 500 ಪುಸ್ತಕಗಳನ್ನು ಖರೀದಿಸುವುದಾಗಿ ಅವರು ಘೋಷಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಮಂಡೆಪಂಡ ಸುಜಾ ಕುಶಾಲಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಮೋಟಯ್ಯ, ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೀವ್ ಬೋಪಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಫೆಡರೇಶನ್ ಆಫ್ ಕೊಡವ ಸಮಾಜದ ಅಧ್ಯಕ್ಷ ಕಳಿಚಂಡ ವಿಷ್ಣು ನಾಚಪ್ಪ, ಲೇಖಕ ಐತಿಚಂಡ ರಮೇಶ್ ಉತ್ತಪ್ಪ, ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು, ಪದಾಧಿಕಾರಿಗಳು ಹಾಗೂ ಕೊಡವ ಸಮಾಜದ ಸದಸ್ಯರು ಉಪಸ್ಥಿತರಿದ್ದರು.








