ಸೋಮವಾರಪೇಟೆ, NEWS DESK ಸೆ.19: ಕಬಡ್ಡಿಯಂತಹ ಗ್ರಾಮೀಣ ಸೊಗಡಿನ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಧೈರ್ಯ, ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹೇಳಿದರು.
ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ ಮಾತ್ರವಲ್ಲದೆ ಆತ್ಮವಿಶ್ವಾಸವೂ ಹೆಚ್ಚುತ್ತದೆ. ಕಬಡ್ಡಿ ಆಟಗಾರರು ಕ್ರೀಡಾ ನಿಯಮಗಳನ್ನು ಪಾಲಿಸಿ, ಕ್ರೀಡಾಸ್ಫೂರ್ತಿಯಿಂದ ಆಟವಾಡಬೇಕು ಎಂದು ಹೇಳಿದರು.
ಸಂಸ್ಥೆಯ ಕರೆಸ್ಪಾಂಡೆಂಟ್ ಕೆ.ಎಂ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಮಹತ್ವದ ಸ್ಥಾನವಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ, ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಕಬಡ್ಡಿ ಕೇವಲ ದೈಹಿಕ ಸಾಮರ್ಥ್ಯದ ಆಟವಲ್ಲ; ಎದುರಾಳಿಯ ತಂತ್ರವನ್ನು ಅರಿತುಕೊಂಡು ಕ್ಷಣಾರ್ಧದಲ್ಲಿ ನಿರ್ಧಾರ ಕೈಗೊಳ್ಳುವ ಕೌಶಲ್ಯವನ್ನು ಬೆಳೆಸುವ ಕ್ರೀಡೆಯಾಗಿದೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಲೆಕ್ಕಿಸದೆ ಉತ್ತಮ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಬೇಕು. ತಾಲೂಕು ಮಟ್ಟದ ಈ ಕ್ರೀಡಾಕೂಟವು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಮಿಲ್ರೆಡ್ ಗೋನ್ಸಾಲ್ವೆಸ್, ಕ್ರೀಡಾಕೂಟದ ಕ್ರೀಡಾ ಸಂಯೋಜಕರಾದ ಅಶೋಕ್, ರಂಗಸ್ವಾಮಿ ಹಾಗೂ ಉಪನ್ಯಾಸಕರಾದ ಸೌಮ್ಯ, ಮೌನ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಗೌಡಳ್ಳಿ ಪ್ರವೀಣ್, ಮಧು ಹಾಗೂ ಆದರ್ಶ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.








