ವಿರಾಜಪೇಟೆ, NEWS DESK ಸೆ.24: ಕಾವೇರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (ಎನ್‌ಎಸ್‌ಎಸ್) ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ. ಪದ್ಮ ಮಾತನಾಡಿ, ಎನ್‌ಎಸ್‌ಎಸ್ ಸ್ವಯಂಸೇವಕರು ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸೇವಾ ಮನೋಭಾವ, ಮಾನವೀಯ ಮೌಲ್ಯಗಳು ಹಾಗೂ ನಿಸ್ವಾರ್ಥ ಸೇವಾ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ಪದವಿಪೂರ್ವ ಕಾಲೇಜಿನ ನಿಕಟಪೂರ್ವ ಎನ್‌ಎಸ್‌ಎಸ್ ಅಧಿಕಾರಿ ಕೆ.ಪಿ. ಗಾಯತ್ರಿ ತಿಮ್ಮಯ್ಯ ಅವರು ರಾಷ್ಟ್ರೀಯ ಸೇವಾ ಯೋಜನಾ ದಿನದ ಮಹತ್ವವನ್ನು ವಿವರಿಸಿದರು. ಸ್ವಯಂಸೇವಕರು ನಿಸ್ವಾರ್ಥ ಸೇವೆಯ ಮೂಲಕ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಎನ್‌ಎಸ್‌ಎಸ್ ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆಯನ್ನು ಕಲ್ಪಿಸುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಪ್ರಾರ್ಥನಾ ಗೀತೆಯನ್ನು ಪ್ರಸ್ತುತಪಡಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಗುರಿ ಮತ್ತು ಉದ್ದೇಶಗಳನ್ನು ವಿವರಿಸಿದರು.
ನಂತರ ಸ್ವಯಂಸೇವಕರು ಕಾಲೇಜು ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಬಳಿಕ ಸಿಹಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಎಂ.ಪಿ. ದಮಯಂತಿ, ಎ.ಎಂ. ಡೈನ ಸೋಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಕು. ನಕಿಯಭಾನು, ಉಪನ್ಯಾಸಕ ವೃಂದ, ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಅನುಪಮ ತಿಮ್ಮಯ್ಯ, ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







