ಸೋಮವಾರಪೇಟೆ, NEWS DESK ಸೆ.24: ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ದೇವಾಲಯ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನವನ್ನು ಸಾರಾಸಗಟಾಗಿ ತಿರಸ್ಕರಿಸಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ನಾಗೇಶ್ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಹಾಗೂ ಕಾರ್ಯದರ್ಶಿ ಯೋಗೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯಾವುದೇ ಕಾರಣಕ್ಕೂ ಶಾಂತಳ್ಳಿ ಮಾತ್ರವಲ್ಲದೆ ಇಡೀ ಕೊಡಗು ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸಬಾರದು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಬಗ್ಗನ ಅನಿಲ್, ರಾಜಶೇಖರ್, ಕೆ.ಎಂ. ಲೋಕೇಶ್, ಎಸ್.ಜಿ. ಮೇದಪ್ಪ, ಡಾಲಿ ಪ್ರಕಾಶ್, ರಾಮಚಂದ್ರ, ಕೃಷ್ಣಕುಮಾರ್, ಸುಖಾಂತ್ ಬಸವರಾಜು, ಮುತ್ತಣ್ಣ ಸೇರಿದಂತೆ ಗ್ರಾಮಸ್ಥರು ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.
ಸಭೆಯ ಅಂತ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ನಿರ್ಣಯ ಕೈಗೊಳ್ಳಲಾಯಿತು. ಈ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಲು ಸಭೆ ತೀರ್ಮಾನಿಸಿತು.








