
ಮಡಿಕೇರಿ NEWS DESK ಸೆ.26 : ಗಣೇಶ ಮೂರ್ತಿಗಳ ವಿಸರ್ಜನೆಯ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ ಸಂಭವಿಸಿ ಐವರು ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮೂಲದ ಬಸವರಾಜು ಹಾಗೂ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಇವರಿಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಮೂವರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿ ಮಂಟಪಗಳ ಮೆರವಣಿಗೆ ಸಾಗುತ್ತಿದ್ದ ಸಂದರ್ಭ ಡಿಜೆ ವಾಹನದ ಮೇಲಿದ್ದವರಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಈ ಅವಘಡದಿಂದ ಐವರು ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಓರ್ವನ ಮೈಲಿನ ಬಟ್ಟೆಗಳಿಗೆ ಬೆಂಕಿ ವ್ಯಾಪಿಸಿದ ಘಟನೆಯೂ ನಡೆಯಿತು. ಇಬ್ಬರು ಸ್ಥಳದಲ್ಲೇ ಪ್ರಜ್ಞಾಹೀನರಾದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವೈದ್ಯರೊಂದಿಗೆ ಚರ್ಚಿಸಿದರು.










