ವಿರಾಜಪೇಟೆ, NEWS DESK ಸೆ.27: ಮೂಲತಃ ವಿರಾಜಪೇಟೆಯವರಾದ ಪ್ರೊ. ಕಂಬಿರಂಡ ರಾಖಿ ಪೂವಣ್ಣ ಎಂ. ಅವರಿಗೆ 2026ನೇ ಸಾಲಿನ ‘ಅಧ್ಯಾಪಕ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ), ಮಂಗಳೂರು ವಿಭಾಗದ ವತಿಯಿಂದ ಅತ್ಯುತ್ತಮ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲೆಯ ಕಿದಿಯೂರಿನ ಮಾಧವ ಕೃಷ್ಣ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.
ಪ್ರೊ. ರಾಖಿ ಪೂವಣ್ಣ ಅವರು ಸ್ವತಃ ಕ್ರೀಡಾಪಟುವಾಗಿ, ಶಿಕ್ಷಕಿಯಾಗಿ, ತರಬೇತುದಾರರಾಗಿ ಹಾಗೂ ಸಂಶೋಧಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಎರಡು ದಶಕಗಳ ಬೋಧನಾ ಅನುಭವ ಹೊಂದಿದ್ದಾರೆ. ಹಾಕಿ, ಹ್ಯಾಂಡ್ಬಾಲ್, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ಬಾಲ್ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
ಅವರ ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ 2026ನೇ ಸಾಲಿನ ಅತ್ಯುತ್ತಮ ದೈಹಿಕ ಶಿಕ್ಷಣ ನಿರ್ದೇಶಕರಾಗಿ ‘ಅಧ್ಯಾಪಕ ಭೂಷಣ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಸ್ತುತ ಪ್ರೊ. ಕಂಬಿರಂಡ ರಾಖಿ ಪೂವಣ್ಣ ಅವರು ಮಡಿಕೇರಿಯ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.







