ಮಡಿಕೇರಿ, NEWS DESK ಸೆ.29: ಕುಶಾಲನಗರದ ಆನೆಕಾಡು ಬಳಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಆನೆಕಾಡು ಬಳಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
ಆನೆಕಾಡು ಬಳಿ ನೂರಾರು ಮಂದಿ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ. ಇನ್ನು ಮುಂದೆ ಇಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದರೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ. ಆದ್ದರಿಂದ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳ ಮನೆಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಶಾಸಕರು ಸೂಚಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಧಿಕಾರಿ ಸಂಜೀವ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.








