
ಮಡಿಕೇರಿ, NEWS DESK ಸೆ.30: ವಿಶ್ವ ಹೃದಯ ದಿನದ ಅಂಗವಾಗಿ ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ. ಸನತ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿವರ್ಷ ಸೆಪ್ಟೆಂಬರ್ 29ರಂದು ವಿಶ್ವ ಹೃದಯ ದಿನ ಆಚರಿಸಲಾಗುತ್ತದೆ. ಹೃದಯ ರಕ್ತನಾಳದ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದು ಹಾಗೂ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಸಮಸ್ಯೆಗಳನ್ನು ತಡೆಗಟ್ಟುವ ಕುರಿತು ಅರಿವು ಮೂಡಿಸುವುದು ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಹೃದಯದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ತಂಬಾಕಿನಿಂದ ದೂರವಿರುವುದು, ಒತ್ತಡ ನಿಯಂತ್ರಣ ಹಾಗೂ ನಿಯಮಿತ ಆರೋಗ್ಯ ತಪಾಸಣೆಯನ್ನು ಜೀವನಶೈಲಿಯ ಭಾಗವನ್ನಾಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮಡಿಕೇರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುನೀಲ್ ಮಾತನಾಡಿ, ಹೃದಯರೋಗಗಳ ಅಪಾಯ, ಲಕ್ಷಣಗಳು ಹಾಗೂ ತಡೆಗಟ್ಟುವ ಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಹೆಚ್ಚು ಉಪ್ಪು, ಸಕ್ಕರೆ ಹಾಗೂ ಸ್ಯಾಚುರೇಟೆಡ್ ಕೊಬ್ಬಿನ ಆಹಾರವನ್ನು ಕಡಿಮೆ ಮಾಡಿ, ತರಕಾರಿ, ಹಣ್ಣುಗಳು, ಧಾನ್ಯಗಳು ಸೇರಿದಂತೆ ಸಮತೋಲಿತ ಆಹಾರ ಸೇವಿಸುವಂತೆ ಸಲಹೆ ನೀಡಿದರು.
ನಿಯಮಿತ ದೈಹಿಕ ಚಟುವಟಿಕೆ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ದೂರವಿರುವುದು ಅಗತ್ಯ. ರಕ್ತದೊತ್ತಡ, ಮಧುಮೇಹ ಮತ್ತು ಕೊಲೆಸ್ಟ್ರಾಲ್ನ್ನು ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಎದೆನೋವು ಅಥವಾ ಒತ್ತಡ, ಉಸಿರಾಟದ ತೊಂದರೆ, ತಣ್ಣನೆಯ ಬೆವರು, ವಾಕರಿಕೆ, ತಲೆಸುತ್ತುವಿಕೆ ಮುಂತಾದ ಹೃದಯಾಘಾತದ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅರುಣ್ ಕುಮಾರ್, ಡಾ. ವಿಜಯ್ ಕುಮಾರ್ ಮೂರ್ನಾಡು, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೆ.ಆರ್. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಶ್ರೀನಾಥ್, ಸುಮತಿ, ನಿಲಿಮ್, ಶಾಲಿನಿ, ಕಿಶೋರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮೇಲ್ವಿಚಾರಕರು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್. ಪಾಲಾಕ್ಷ ಸ್ವಾಗತಿಸಿದರು.
ಜಾಗೃತಿ ಜಾಥಾ
ವಿಶ್ವ ಹೃದಯ ದಿನದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೃದಯದ ಆರೋಗ್ಯದ ಕುರಿತು ಅರಿವು ಮೂಡಿಸುವ ಕರಪತ್ರಗಳನ್ನು ವಿತರಿಸಲಾಯಿತು.








