
ವಿರಾಜಪೇಟೆ, NEWS DESK ಸೆ.30: ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ವಿರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ. ಮಂಜುನಾಥ್ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಜಿಲ್ಲೆಯ ರಾಜಕೀಯ ಬೆಳವಣಿಗೆಗಳು, ರೈತರ ಸಮಸ್ಯೆಗಳು ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.
ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಉತ್ತಮ ಸಮನ್ವಯ ಸಾಧಿಸಲು ಸಮನ್ವಯ ಸಮಿತಿ ರಚಿಸುವಂತೆ ಸಚಿವರಿಗೆ ಮನವಿ ಮಾಡಲಾಯಿತು. ಸಮಿತಿಯ ಮೂಲಕ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಒಗ್ಗಟ್ಟು ಮೂಡಿಸಿ ಚುನಾವಣೆಯನ್ನು ಎದುರಿಸಲು ರೂಪುರೇಷೆ ಸಿದ್ಧಪಡಿಸುವಂತೆ ಕೋರಲಾಯಿತು.
ಇದೇ ವೇಳೆ ಕೊಡಗಿನ ಕಾಫಿ ಬೆಳೆಗಾರರು, ಕೃಷಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಬಾರದು ಎಂದು ಕೇಂದ್ರ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಜೆಡಿಎಸ್ ಸಂಘಟನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆಯೂ ಚರ್ಚೆ ನಡೆಯಿತು. ಇದಕ್ಕೆ ಸ್ಪಂದಿಸಿದ ಎಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಸಂಘಟನೆ ಬಲಪಡಿಸಲು ಹಾಗೂ ಕಾರ್ಯಕರ್ತರಿಗೆ ಧೈರ್ಯ ತುಂಬಲು ಶೀಘ್ರದಲ್ಲೇ ಕೊಡಗು ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದರು.
ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಶಿವದಾಸ್, ಮಡಿಕೇರಿ ತಾಲೂಕು ಅಧ್ಯಕ್ಷ ರವಿ ಕಿರಣ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.








