
ವಿರಾಜಪೇಟೆ, NEWS DESK ಸೆ.30: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಮುಖಂಡರು ಹಾಗೂ ವಂದನೀಯ ಗುರುಗಳ ಪ್ರಮುಖ ನಿಯೋಗವು ಬೆಂಗಳೂರಿನ ವಿಧಾನಸೌಧದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿತು.
ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಕ್ಷೇತ್ರದ ಅಭಿವೃದ್ಧಿ ಸಮಸ್ಯೆಗಳು, ಕ್ರಿಶ್ಚಿಯನ್ ಸಮುದಾಯ ಹಾಗೂ ಸಾರ್ವಜನಿಕರ ಉನ್ನತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯದ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಯಿತು.
ಮನವಿಯನ್ನು ಸ್ವೀಕರಿಸಿದ ಸಚಿವ ಯು.ಟಿ. ಖಾದರ್ ಅವರು, ಮುಖಂಡರು ಮಂಡಿಸಿದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಸ್ಥಳೀಯ ಅಗತ್ಯಗಳಿಗೆ ಸ್ಪಂದಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಸಂಪೂರ್ಣ ಬೆಂಬಲವಿರುವುದಾಗಿ ಹೇಳಿದರು.
ನಿಯೋಗದಲ್ಲಿ ವಿರಾಜಪೇಟೆ ಡೀನ್ ವಂ. ಜೇಮ್ಸ್ ಡೊಮಿನಿಕ್, ಸೇಂಟ್ ಆನ್ಸ್ ಕಾಲೇಜು ಪ್ರಾಂಶುಪಾಲರು ಹಾಗೂ ಅಮ್ಮತ್ತಿ ಪ್ಯಾರಿಷ್ ಪಾದ್ರಿ ವಂ. ಮದಲೈ ಮುತ್ತು, ದೇವರಪುರದ ಸೇಂಟ್ ಜೋಸೆಫ್ ಆಶ್ರಮದ ವಂ. ಹರ್ಷಿತ್ ದೇವ್, ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ. ಬಾಬು, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ರೊಡ್ರಿಗಸ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಾನ್ಸನ್ ಪಿ.ವಿ., ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಆಂಟನಿ ರಾಬಿನ್, ಸಿದ್ದಾಪುರದ ಹಿರಿಯ ಕಾಂಗ್ರೆಸ್ ಮುಖಂಡ ಜೋಸೆಫ್ ಸ್ಯಾಮ್, ಗೋಣಿಕೊಪ್ಪದ ಕಾಂಗ್ರೆಸ್ ಮುಖಂಡ ಹಾಗೂ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಲಾಲು ಸ್ಟಾಲಿನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸಭೆಯು ವಿರಾಜಪೇಟೆ ಕ್ಷೇತ್ರದ ಹಾಗೂ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಕಾರಾತ್ಮಕ ಹೆಜ್ಜೆಗಳಿಗೆ ದಾರಿಯಾಗಲಿದೆ ಎಂದು ಮುಖಂಡರು ಆಶಾಭಾವನೆ ವ್ಯಕ್ತಪಡಿಸಿದರು.








