ಸುಂಟಿಕೊಪ್ಪ, NEWS DESK ಅ.2: ಕೊಡಗು ಸುರಕ್ಷಾ ಆಂದೋಲನ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಜನ ಜಾಗೃತಿ ಆಂದೋಲನ ರಥಕ್ಕೆ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಶುಕ್ರವಾರ ಅಪರಾಹ್ನ ಸಿದ್ಧಾಪುರದಿಂದ ಸುಂಟಿಕೊಪ್ಪಕ್ಕೆ ಆಗಮಿಸಿದ ಜನ ಜಾಗೃತಿ ಆಂದೋಲನ ರಥವನ್ನು ಕನ್ನಡ ವೃತ್ತದ ಬಳಿ ಸ್ವಾಗತಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಬಿ. ಭಾರತೀಶ್ ಅವರು, ರಾಷ್ಟ್ರದ ಸುರಕ್ಷತೆ ಕೇವಲ ಸರ್ಕಾರದ ಕೆಲಸವಲ್ಲ, ದೇಶದ ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹೇಳಿದರು.
ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆಗೆ ಧಕ್ಕೆ ತರುತ್ತಿರುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಹಾಗೂ ರಾಷ್ಟ್ರೀಯ ಸುರಕ್ಷತೆಯನ್ನು ಕಾಯುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಸೆ.28ರಿಂದ ಅ.9ರವರೆಗೆ ಜನ ಜಾಗೃತಿ ಜನಾಂದೋಲನ ರಥಯಾತ್ರೆ ನಡೆಯುತ್ತಿದೆ. ಅ.9ರಂದು ಗಾಂಧಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಪ್ರತಿಯೊಬ್ಬರೂ ಜನಜಾಗೃತಿ ಜನಾಂದೋಲನದಲ್ಲಿ ಪಾಲ್ಗೊಂಡು ದೇಶ ರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಜನ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಚಂದ್ರ ಉಡ್ವತ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಕೆದಕಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಂಜು ಪೊನ್ನಪ್ಪ, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ. ನರಸಿಂಹ, ಧನುಕಾವೇರಪ್ಪ, ವಾಸು, ಪ್ರಕಾಶ್, ದಯಾನಂದ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ವಸಂತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಲೀಲಾ ಮೇದಪ್ಪ, ತ್ರೀಶಲ್ ಕರುಂಬಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.








