ಮಡಿಕೇರಿ, NEWS DESK ಅ.6 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಆಗುತ್ತಿರುವ ಲೋಪದೋಷಗಳ ಕುರಿತು ಚರ್ಚಿಸಲು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಸಲುವಾಗಿ ಇಂಡಿಯಾ ಒಕ್ಕೂಟದ ವತಿಯಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ SIR ಪ್ರಕ್ರಿಯೆಯಲ್ಲಿನ ಲೋಪದೋಷಗಳು ಹಾಗೂ ಅವುಗಳ ವಿರುದ್ಧ ಕೈಗೊಳ್ಳಬೇಕಾದ ಹೋರಾಟದ ಕುರಿತು ಚರ್ಚಿಸಲಾಯಿತು. ಸಭೆಯ ಬಳಿಕ ಇಂಡಿಯಾ ಒಕ್ಕೂಟದ ನಿಯೋಗ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು. ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕೆಂದು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಗ್ರಹಿಸಿದವು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಚಂದ್ರಶೇಖರ್ ಆರ್.ಪಿ., ಮಿನಾಜ್ ಪ್ರವೀಣ್, ಸಿಪಿಐ(ಎಂ) ಅಧ್ಯಕ್ಷ ಹೆಚ್.ಬಿ. ರಮೇಶ್, ಸಿಪಿಐ ಅಧ್ಯಕ್ಷ ರಮೇಶ್ ಮಾಯಮುಡಿ ಸೇರಿದಂತೆ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.








