
ಮಡಿಕೇರಿ, NEWS DESK ಅ.7: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ನಗರದ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಮಾವೇಶಗೊಂಡರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರವನ್ನು ಎಲ್‌ಇಡಿ ಪರದೆಯ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಬಳಿಕ ‘ಸೇವಾ ಜ್ಯೋತಿ’ಯನ್ನು ಪ್ರಜ್ವಲಿಸಲಾಯಿತು. ಗಾಂಧಿ ಮೈದಾನದಿಂದ ಹಳೆಯ ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಇಂದಿರಾಗಾಂಧಿ ವೃತ್ತದವರೆಗೆ ‘ಸೇವಾ ಜ್ಯೋತಿ’ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.









