ಮಡಿಕೇರಿ, NEWS DESK ಅ.7: ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಅರ್ಥಪೂರ್ಣವಾಗಿ ದಸರಾ ಆಚರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ದಸರಾ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾನೂನು ಸುವ್ಯವಸ್ಥೆ ಕ್ರಮಗಳ ಕುರಿತು ದಸರಾ ಸಮಿತಿ ಪ್ರಮುಖರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ನಿಗದಿಪಡಿಸಿರುವ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ದಸರಾ ಸಮಿತಿಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಿಸಿಟಿವಿ, ಬೆಳಕು ವ್ಯವಸ್ಥೆಗೆ ಒತ್ತು
ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾ ಸಮಿತಿಗಳು ಪೊಲೀಸ್ ಇಲಾಖೆ ಸೂಚಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ವಾಹನ ನಿಲುಗಡೆ ಪ್ರದೇಶಗಳಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಆರೋಗ್ಯ ಇಲಾಖೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಂಬ್ಯುಲೆನ್ಸ್‌ಗಳನ್ನು ಒದಗಿಸುವುದು, ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡುವುದು ಹಾಗೂ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಜಾಗವನ್ನು ಅಗತ್ಯಕ್ಕೆ ತಕ್ಕಂತೆ ಕಾಯ್ದಿರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಇಲಾಖೆ ವತಿಯಿಂದ ಮರದ ಕೊಂಬೆಗಳನ್ನು ತೆರವುಗೊಳಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮಡಿಕೇರಿಯಲ್ಲಿ 27, ಗೋಣಿಕೊಪ್ಪದಲ್ಲಿ 15 ಸಿಸಿಟಿವಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾತನಾಡಿ, ದಸರಾ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗುವುದು. ಮಡಿಕೇರಿಯಲ್ಲಿ 27 ಹಾಗೂ ಗೋಣಿಕೊಪ್ಪದಲ್ಲಿ 15 ಕಡೆಗಳಲ್ಲಿ ಸಿಸಿಟಿವಿ ಅಳವಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಪಾರ್ಕಿಂಗ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು ಹಾಗೂ ಪ್ರವಾಸಿ ಸ್ಥಳಗಳಲ್ಲಿ ಡಿಎಫ್‌ಎಂಡಿ (ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್) ಅಳವಡಿಸುವ ಅಗತ್ಯವಿದೆ ಎಂದರು. ಪ್ರವಾಸೋದ್ಯಮ ಸಮಿತಿ ವತಿಯಿಂದ ಡಿಎಫ್‌ಎಂಡಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚೆಕ್‌ಪೋಸ್ಟ್‌ಗಳಲ್ಲಿ ಟೆಂಟ್‌ಗಳ ವ್ಯವಸ್ಥೆ, ಸಹಾಯವಾಣಿ ಕೇಂದ್ರ ತೆರೆಯುವುದು ಹಾಗೂ ವೈದ್ಯರು ಮತ್ತು ಶುಶ್ರೂಷಕರನ್ನು ನಿಯೋಜಿಸುವಂತೆ ಎಸ್‌ಪಿ ಸೂಚಿಸಿದರು.
ಮದ್ಯ ಮಾರಾಟ, ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಕಡಿವಾಣ
ಸೆಸ್ಕ್ ಇಲಾಖೆಯಿಂದ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಬಕಾರಿ ಇಲಾಖೆ ಮದ್ಯ ಮಾರಾಟ ನಿಷೇಧಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು ಕಂಡುಬಂದರೆ ಪ್ರಕರಣ ದಾಖಲಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
ವಿರಾಜಪೇಟೆಯಿಂದ ಮಡಿಕೇರಿಗೆ ಬರುವ ವಾಹನಗಳಿಗೆ ಮೇಕೇರಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗುವುದು. ಮೇಕೇರಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಎಸ್‌ಪಿ ವಿವರಿಸಿದರು.
ಜನರಲ್ ತಿಮ್ಮಯ್ಯ ವೃತ್ತ ಸೇರಿದಂತೆ ಅಗತ್ಯ ಸ್ಥಳಗಳಲ್ಲಿ ವಾಚ್‌ಟವರ್‌ಗಳನ್ನು ಅಳವಡಿಸಲಾಗುವುದು. ಮಂಟಪಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ದಶಮಂಟಪ ಸಮಿತಿಗೆ ಸೂಚಿಸಿದರು. ಎಲ್ಲರೂ ಎಸ್‌ಒಪಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ನಿಯಮ ಉಲ್ಲಂಘಿಸಬಾರದು ಎಂದು ನಿರ್ದೇಶನ ನೀಡಿದರು.
ಮಂಟಪಗಳ ಸುರಕ್ಷತೆಗೆ ಆದ್ಯತೆ
ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ದಸರಾ ಯಶಸ್ವಿಯಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸದಾ ಕೈಜೋಡಿಸಲಾಗುವುದು ಎಂದರು. ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಡಿಕೇರಿ ದಸರಾ ವಿಜೃಂಭಣೆಯಿಂದ ನಡೆಯಲಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ದಶಮಂಟಪ ಸಮಿತಿ ಅಧ್ಯಕ್ಷ ಪಾಂಡನ ಪೂಣಚ್ಚ ಮಾತನಾಡಿ, 10 ಮಂಟಪಗಳಿಗೆ ಅಗತ್ಯ ಮಾಹಿತಿ ನೀಡಲಾಗುವುದು. ಮಂಟಪಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಮಂಟಪಗಳ ವಾಹನಗಳಿಗೆ ಸಂಬಂಧಿಸಿದಂತೆ ಆರ್‌ಟಿಒ ಪ್ರಮಾಣಪತ್ರದ ಕುರಿತು ಚರ್ಚೆ ನಡೆಯಿತು. ಕಾನೂನು ಉಲ್ಲಂಘನೆಯಾಗದಂತೆ ಅಗತ್ಯ ಮಾರ್ಗದರ್ಶನ ನೀಡಬೇಕು ಹಾಗೂ ದಸರಾ ವೀಕ್ಷಕರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ ಆಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಗೋಣಿಕೊಪ್ಪ ದಸರಾ ಸಮಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಡಿವೈಎಸ್‌ಪಿ ಸೂರಜ್, ಐಪಿ ಮೇದಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದಸರಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

















