ಮಡಿಕೇರಿ, NEWS DESK ಅ.7: ಕುಶಾಲನಗರ ಸಮೀಪದ ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇಪದೇ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ಪ್ರಾದೇಶಿಕ ಅಧಿಕಾರಿ ಅಭಿಜೀತ್ ಕುಮಾರ್ ಅವರೊಂದಿಗೆ ತುರ್ತು ಸಭೆ ನಡೆಸಿದರು.
ಸಭೆಯಲ್ಲಿ ಆನೆಕಾಡು ಹೆದ್ದಾರಿಯಲ್ಲಿರುವ ರಸ್ತೆ ಸುರಕ್ಷತಾ ನ್ಯೂನತೆಗಳು, ಅಪಘಾತ ವಲಯಗಳು ಹಾಗೂ ಡಾರ್ಕ್ ಸ್ಪಾಟ್‌ಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಹೆದ್ದಾರಿಯಲ್ಲಿ ಅಪಘಾತಗಳಿಗೆ ಕಾರಣವಾಗಬಹುದಾದ ಪ್ರಮುಖ ಅಂಶಗಳನ್ನು ಗುರುತಿಸಿ, ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಆನೆಕಾಡು ಹೆದ್ದಾರಿಯಲ್ಲಿ ಅಗತ್ಯವಿರುವ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳುವಂತೆ ಶಾಸಕ ಡಾ. ಮಂತರ್ ಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅಪಘಾತ ವಲಯಗಳನ್ನು ವೈಜ್ಞಾನಿಕವಾಗಿ ಗುರುತಿಸಿ, ಅಗತ್ಯವಿರುವ ಸ್ಥಳಗಳಲ್ಲಿ ಸೂಚನಾ ಫಲಕಗಳು, ರಸ್ತೆ ಗುರುತುಗಳು, ಬೆಳಕಿನ ವ್ಯವಸ್ಥೆ ಸೇರಿದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
“ಸಾರ್ವಜನಿಕರ ಜೀವ ಸುರಕ್ಷತೆಗೆ ಮೊದಲ ಆದ್ಯತೆ. ಅಪಘಾತಗಳನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು,” ಎಂದು ಡಾ. ಮಂತರ್ ಗೌಡ ಅವರು ಸಭೆಯಲ್ಲಿ ತಿಳಿಸಿದರು.
ಆನೆಕಾಡು ಹೆದ್ದಾರಿಯ ಸುರಕ್ಷತಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.

















