ನಾಪೋಕ್ಲು, NEWS DESK ಅ. 10: ಬೆಟ್ಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಕ್ಕ ಗ್ರಾಮಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಭೇಟಿ ನೀಡಿ, ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು.
ಬಕ್ಕ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸುವ ಅಗತ್ಯವಿರುವ ಬಗ್ಗೆ ಸ್ಥಳೀಯರು ಈ ಹಿಂದೆ ಶಾಸಕರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು, ಸಮುದಾಯ ಭವನ ನಿರ್ಮಾಣಕ್ಕಾಗಿ ಉದ್ದೇಶಿತ ಸ್ಥಳವನ್ನು ಪರಿಶೀಲಿಸಿದರು. ಬಳಿಕ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ವಿವಿಧ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದ ಅವರು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಕ್ಕ ಗ್ರಾಮದ ಸ್ಥಳೀಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಡಿಕೇರಿ ಪುರಸಭೆಯ ಅಭಿಯಂತರ ಹೇಮಂತ್ ಕುಮಾರ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಕೊಡಗನ ತೀರ್ಥ ಕುಮಾರ್, ಗೌರೀಶ್, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಸ್ಥಳೀಯ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ದುಗ್ಗಳ ಸದಾನಂದ

















