ಮೈಸೂರು, NEWS DESK ಅ.12: ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿಯನ್ನು ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರಂತರ ಪ್ರಯತ್ನದ ಫಲವಾಗಿ ಈ ಮಹತ್ವದ ಬೆಳವಣಿಗೆ ನಡೆದಿದೆ.
ಕೇಂದ್ರ ಸಂವಹನ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಅ.7ರಂದು ಸಂಸದ ಯದುವೀರ್ ಒಡೆಯರ್ ಅವರಿಗೆ ಬರೆದ ಅಧಿಕೃತ ಪತ್ರದಲ್ಲಿ ಈ ವಿಷಯವನ್ನು ದೃಢಪಡಿಸಿದ್ದಾರೆ.
ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿಯನ್ನು ಮೈಸೂರಿಗೆ ಸ್ಥಳಾಂತರಿಸುವಂತೆ ಕೋರಿ ಸಂಸದರು ಆ.7ರಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಶೀಲಿಸಿದ ಅಂಚೆ ಇಲಾಖೆಯು ಆಡಳಿತಾತ್ಮಕ ವ್ಯವಸ್ಥೆಯ ಪುನರ್‌ರಚನೆ ಹಾಗೂ ಸಮತೋಲಿತ ಆಡಳಿತದ ಭಾಗವಾಗಿ ಪ್ರಸ್ತಾವನೆಯನ್ನು ಪರಿಗಣಿಸಿದೆ.
ಮೈಸೂರಿಗೆ ಪ್ರಧಾನ ಕಚೇರಿ ಸ್ಥಳಾಂತರಿಸುವ ಪ್ರಸ್ತಾವನೆ ಸಮರ್ಥನೀಯವಾಗಿದ್ದು, ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ. ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಪ್ರಾದೇಶಿಕ ಕಚೇರಿಗೆ ಸೂಕ್ತ ಕಟ್ಟಡದ ವ್ಯವಸ್ಥೆ ಮಾಡಿದ ಬಳಿಕ ಸ್ಥಳಾಂತರ ಕಾರ್ಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಿರ್ಧಾರವು ಮೈಸೂರಿನ ಆಡಳಿತಾತ್ಮಕ ಮಹತ್ವವನ್ನು ಹೆಚ್ಚಿಸುವುದರ ಜತೆಗೆ, ಬೆಂಗಳೂರಿನಾಚೆಗೆ ಪ್ರಮುಖ ಸರ್ಕಾರಿ ಕಚೇರಿಗಳನ್ನು ವಿಕೇಂದ್ರೀಕರಿಸಿ ಪ್ರಾದೇಶಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಪ್ರಯತ್ನಕ್ಕೆ ಪೂರಕವಾಗಲಿದೆ.
ಈ ಮಹತ್ವದ ಪ್ರಸ್ತಾವನೆಗೆ ತಾತ್ವಿಕ ಒಪ್ಪಿಗೆ ನೀಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅಂಚೆ ಇಲಾಖೆಯ ಅಧಿಕಾರಿಗಳಿಗೆ ಸಂಸದ ಯದುವೀರ್ ಒಡೆಯರ್ ಕೃತಜ್ಞತೆ ಸಲ್ಲಿಸಿದ್ದಾರೆ. ಮೈಸೂರಿನ ಮೂಲಸೌಕರ್ಯ ಅಭಿವೃದ್ಧಿ, ಪ್ರಮುಖ ಸರ್ಕಾರಿ ಸಂಸ್ಥೆಗಳ ಸ್ಥಾಪನೆ ಹಾಗೂ ಪ್ರಾದೇಶಿಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ತಮ್ಮ ಪ್ರಯತ್ನಗಳು ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
ಪ್ರಧಾನ ಕಚೇರಿ ಸ್ಥಳಾಂತರಕ್ಕೆ ಅಗತ್ಯವಿರುವ ಮುಂದಿನ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಲಾಗುವುದು ಎಂದು ಸಂಸದರ ಕಚೇರಿ ತಿಳಿಸಿದೆ.
















