ಮಡಿಕೇರಿ, NEWS DESK ಅ.13: ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ನೈಜ ಮತದಾರರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ, ಇದನ್ನು ವಿರೋಧಿಸಿ ಅಕ್ಟೋಬರ್ 15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯ ಸಂಚಾಲಕ ಡಿ.ಹೆಚ್. ನಿರ್ವಾಣಪ್ಪ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾತ್ಯತೀತ ಚಿಂತನೆಯ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಪ್ರಶ್ನಿಸಿ ದೆಹಲಿಯಲ್ಲಿ ಯುವ ಸಮೂಹ ಸೇರಿದಂತೆ ಕಾಂಗ್ರೆಸ್ ಹಾಗೂ ವಿವಿಧ ಪಕ್ಷಗಳು ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರಜೆಗಳಿಗೆ ನೀಡಿರುವ ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ದೇಶದೊಳಗಿನ ಅಕ್ರಮ ನುಸುಳುಕೋರರನ್ನು ಪತ್ತೆಹಚ್ಚಿ ಹೊರಹಾಕುವ ಉದ್ದೇಶವನ್ನು ಮುಂದಿಟ್ಟುಕೊಂಡು ಆರಂಭಿಸಲಾದ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ನೈಜ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ನಿರ್ವಾಣಪ್ಪ ಆರೋಪಿಸಿದರು. ವಿವಿಧ ರಾಜ್ಯಗಳಲ್ಲಿ ಕೋಟ್ಯಂತರ ನೈಜ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ ಎಂದು ದೂರಿದ ಅವರು, ಇದರ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು.
ವೇದಿಕೆಯ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಹೇಳಿದರು. ದೇಶದ ಬಹುತ್ವ ಪರಂಪರೆ ಹಾಗೂ ಜಾತ್ಯತೀತ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟಗಳು ನಡೆಯುತ್ತಿದ್ದು, ಯುವಶಕ್ತಿಯ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಟೀಕಿಸಿದರು.
ವೇದಿಕೆಯ ಸಿ.ಎಂ. ಹಮೀದ್ ಮೌಲವಿ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಗಾಗಿ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಜ್ಞಾವಂತ ನಾಗರಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪ್ರೇಂಕುಮಾರ್, ಮೊಹಮ್ಮದ್ ಹನೀಫ್ ಹಾಗೂ ಹೆಚ್.ಎಲ್. ದಿವಾಕರ್ ಅವರು ಪ್ರತಿಭಟನೆಗೆ ಜಿಲ್ಲೆಯ ಜನತೆ ಬೆಂಬಲ ನೀಡುವಂತೆ ಕೋರಿದರು.

















