ಮಡಿಕೇರಿ, NEWS DESK, ಅ.13: ಮುಂಬರುವ 2028ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಹಳೆಯ ಪಕ್ಷಗಳು ಹಾಗೂ ಅಭ್ಯರ್ಥಿಗಳನ್ನು ಬದಿಗೊತ್ತಿ, ಹೊಸ ಚಿಂತನೆ ಮತ್ತು ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಬಳ್ಳಾರಿ ಮೂಲದ ಉದಯ ಕುಮಾರ್ ಜೆ. ಮನವಿ ಮಾಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಸ್ವತಂತ್ರ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿ ಚುನಾವಣಾ ಕಣಕ್ಕೆ ಇಳಿಯುವ ಚಿಂತನೆ ಹೊಂದಿರುವುದಾಗಿ ತಿಳಿಸಿದರು. ಈಗಾಗಲೇ ಬಳ್ಳಾರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡಿ ಸಮಾನ ಮನಸ್ಕರನ್ನು ಸಂಪರ್ಕಿಸಿರುವುದಾಗಿ ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಾನ ಮನಸ್ಕರ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ಬಳಿಕ ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ನೂತನ ಪಕ್ಷವನ್ನು ಸ್ಥಾಪಿಸುವ ಉದ್ದೇಶವಿದೆ ಎಂದು ತಿಳಿಸಿದರು.
ತಮ್ಮ ಪಕ್ಷದ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳ ಪೈಕಿ ತಲಾ 112 ಕ್ಷೇತ್ರಗಳಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಉದಯ ಕುಮಾರ್ ಹೇಳಿದರು.
ಪ್ರಸ್ತುತ ರಾಜಕೀಯ ಅಧಿಕಾರವು ಕೆಲವೇ ಕೆಲವು ವ್ಯಕ್ತಿಗಳಿಗೆ ಸೀಮಿತವಾದ ವ್ಯವಸ್ಥೆಯಾಗಿ ಮಾರ್ಪಟ್ಟಿದೆ. ದೇಶ ಹಾಗೂ ರಾಜ್ಯದ ಜನರು ಆಡಳಿತ ನಡೆಸುತ್ತಿರುವವರ ಕಾರ್ಯವೈಖರಿಯಿಂದ ಬೇಸತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಚಿಂತನೆ ಮತ್ತು ಬದಲಾವಣೆಯ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

















