ಮಡಿಕೇರಿ, NEWS DESK ಅ.15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಯಿಂದ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ, ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ಸಂಚಾಲಕ ಡಿ.ಎಸ್. ನಿರ್ವಾಣಪ್ಪ, ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹಾಗೂ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು, ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಎಸ್.ಐ.ಆರ್. ಪ್ರಕ್ರಿಯೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಅಸಂವಿಧಾನಿಕವಾಗಿದೆ ಎಂದು ಆರೋಪಿಸಿದರು. ಈ ಪ್ರಕ್ರಿಯೆಯ ಅನುಷ್ಠಾನದಿಂದ ನೈಜ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ ಎಂದು ಅವರು ಹೇಳಿದರು.
ಹಳೆಯ ಖಾಸಗಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ನಗರಸಭೆಯ ಮುಂಭಾಗವಾಗಿ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದತ್ತ ಸಾಗಿತು. ಈ ವೇಳೆ ಜನರಲ್ ತಿಮ್ಮಯ್ಯ ವೃತ್ತದ ಕಡೆಗೆ ತೆರಳದಂತೆ ಪೊಲೀಸರು ಮೆರವಣಿಗೆಯನ್ನು ತಡೆದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ಮತ್ತು ತಳ್ಳಾಟ ನಡೆಯಿತು. ಬಳಿಕ ಪ್ರತಿಭಟನಾಕಾರರು ಪೊಲೀಸ್ ತಡೆಯನ್ನು ದಾಟಿ ಜನರಲ್ ತಿಮ್ಮಯ್ಯ ವೃತ್ತದತ್ತ ತೆರಳಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ನಡೆಸಿದರು.
ಪ್ರತಿಭಟನೆಯ ಬಳಿಕ ಕೊಡಗು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ವರ್ಗಗಳ ಅರ್ಹ ಮತದಾರರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಫಾರಂ ನಂ. 6 ಮತ್ತು 7ರ ನೆಪದಲ್ಲಿ ಮತದಾರರ ಪಟ್ಟಿಯನ್ನು ತಪ್ಪಾಗಿ ಪರಿಷ್ಕರಿಸಲಾಗುತ್ತಿದ್ದು, ಇದರಿಂದ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಈ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಎಸ್.ಐ.ಆರ್. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅಲ್ಲದೆ, ಹೋರಾಟಗಾರರು, ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕೆಂದೂ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯ ಸಿ.ಎಂ. ಹಮೀದ್ ಮೌಲವಿ, ಪ್ರೇಂಕುಮಾರ್, ಅಬ್ದುಲ್ ಅಡ್ಕರ್, ಮೊಹಮ್ಮದ್ ಹನೀಫ್, ಹೆಚ್.ಎಲ್. ದಿವಾಕರ್, ಎಸ್ಡಿಪಿಐ ಉಪಾಧ್ಯಕ್ಷ ಎಂ.ಕೆ. ಮನ್ಸೂರ್ ಅಲಿ, ಕಾಂಗ್ರೆಸ್ ಮುಖಂಡ ಮುನೀರ್ ಮಾಚಾರ್, ಕೆಪಿಸಿಸಿ ಸದಸ್ಯ ಕೆ.ಎ. ಯಾಕುಬ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಎಸ್ಡಿಪಿಐ ಕಾರ್ಮಿಕ ಘಟಕದ ಅಧ್ಯಕ್ಷ ಎಂ.ಎ. ಅಬ್ದುಲ್ ರಜಾಕ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

















